ಸ್ನಾತಕೋತ್ತರ ಪದವಿವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯ ಸರ್ಕಾರದ ಚಿಂತನೆ

01 Sep 2017 2:21 PM | General
422 Report

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಎಲ್ಲಾ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಉಚಿತ ವಿದ್ಯಾಭ್ಯಾಸ ನೀಡಲು ಸರ್ಕಾರ ಯೋಜಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯ ರೆಡ್ಡಿ ತಿಳಿಸಿದ್ದಾರೆ. 

 

ಸದ್ಯ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ  ವಿದ್ಯಾರ್ಥಿನಿಯರಿಗೆ ಪದವಿವರೆಗೆ ಮಾತ್ರ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸರ್ಕಾರಿ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಲ್ಲೂ ವಿದ್ಯಾರ್ಥಿನಿಯರಿಗೆ ಸ್ನಾತಕೋತ್ತರ ಪದವಿಯ ವರೆಗೆ ಉಚಿತವಾಗಿ ಶಿಕ್ಷಣ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರು ವಿವಿ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಶುಲ್ಕ ರದ್ಧು ಮಾಡುವ ಬಗ್ಗೆ ಒಂದು ಸಮಿತಿ ರಚನೆ ಮಾಡಿದ್ದೇವೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಯೋಜನೆಗಳ ದುರುಪಯೋಗವಾಗುವುದನ್ನು ತಡೆಯಲು  ಸರ್ಕಾರ ಸದ್ಯ ನೀಡುತ್ತಿರುವ ವಿದ್ಯಾರ್ಥಿ ವೇತನ ವಾಪಸ್ ಪಡೆಯಲು ಮೊದಲ ಆದ್ಯತೆ ನೀಡಬೇಕು, ಇದರಿಂದ ಫಲಾನುಭವಿಗಳಿಗೆ ಮರುಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Courtesy: Kannadaprabha

Comments