ದಾನಮ್ಮಳ ಅತ್ಯಾಚಾರ,ಹತ್ಯೆಯನ್ನು ಖಂಡಿಸಿ ಜೆಡಿಎಸ್ ನಿಂದ ಪ್ರತಿಭಟನೆ

ವಿಜಯಪುರದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿ ದಾನಮ್ಮಳ ಅತ್ಯಾಚಾರ ಮತ್ತು ಭೀಕರ ಹತ್ಯೆಯನ್ನು ಖಂಡಿಸಿ ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಗಾಂಧಿ ಮಂಟಪದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಹತ್ಯೆಯನ್ನು ಖಂಡಿಸಿದರು. ತಲೆಮರೆಸಿಕೊಂಡಿರುವ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ ಮತ್ತು ಶೋಷಣೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ರಕ್ಷಣೆ ಹೆಸರಿನಲ್ಲಿ ಕೇವಲ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿರುವ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಿ.ಎ.ಜೀವಿಜಯ, ಕರ್ನಾಟಕ, ರಾಜ್ಯಸ್ಥಾನ, ಹೈದರಾಬಾದ್, ಗುಜರಾತ್ ರಾಜ್ಯಗಳಲ್ಲೂ ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಸಚಿವ ಅನಂತಕುಮಾರ್ ಹೆಗಡೆ ಸಂವಿಧಾನದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದರು ಪ್ರಧಾನಿ ನರೇಂದ್ರ ಮೋದಿ, ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರ ದಲಿತ ವಿರೋಧಿ ನಿಲುವು ಹೊಂದಿದೆ ಎಂಬುದನ್ನು ಬಿಂಬಿಸಿದ್ದಾರೆ ಎಂದು ಜೀವಿಜಯ ಆರೋಪಿಸಿದರು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದ್ದು, ಹೆಣ್ಣು ಮಕ್ಕಳು ರಸ್ತೆಯಲ್ಲಿ ನಡೆಯಲು ಭಯಪಡುವಂತಾಗಿದೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ದಾನಮ್ಮ ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ದಾನಮ್ಮಳ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾನವ ಸಮಾಜವೇ ತಲೆತಗ್ಗಿಸುವ ವಿಚಾರವಾಗಿದೆ. ಇಂದಿಗೂ ಪ್ರಕರಣದಲ್ಲಿ ಭಾಗಿಯಾದ ಕೆಲವು ಆರೋಪಿಗಳು ತಲೆ ಮರೆಸಿಕೊಂಡಿರುವುದು ರಾಜ್ಯ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ಬಿಂಬಿಸುತ್ತಿದೆ ಎಂದು ಆರೋಪಿಸಿದರು. ಹತ್ಯೆ ಆರೋಪಿಗಳಿಗೆ ರಾಜ್ಯ ಸರ್ಕಾರವೇ ರಕ್ಷಣೆ ನೀಡುತ್ತಿದೆ ಎಂದು ಟೀಕಿಸಿದ ಸಂಕೇತ್ ಪೂವಯ್ಯ, ಪ್ರಕರಣವನ್ನು ತನಿಖೆ ಮಾಡಲು ವಿಶೇಷ ತನಿಖಾಧಿಕಾರಿಗಳು ಮತ್ತು ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಲು ನುರಿತ ವಕೀಲರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿದರು. ತಪ್ಪಿತಸ್ಥರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಸಂಕೇತ್ ಪೂವಯ್ಯ ಒತ್ತಾಯಿಸಿದರು.
ದಾನಮ್ಮ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸೇರಿದಂತೆ ದಲಿತರ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಕೊಡಿಸುವಂತೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಜೆಡಿಎಸ್ ರಾಜ್ಯ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಎಂ.ಎಂ.ಶರೀಫ್, ಜೆಡಿಎಸ್ ಜಿಲ್ಲಾ ವಕ್ತಾರ ಆದಿಲ್ ಪಾಷ, ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಮನ್ಸೂರ್ ಅಲಿ, ಡಾ. ಯಾಲದಾಳು ಮನೋಜ್ ಬೋಪಯ್ಯ, ರಾಜೇಶ್ ಯಲ್ಲಪ್ಪ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎಂ.ಗಣೇಶ್, ಸೋಮವಾರಪೇಟೆ ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ, ಶಿವದಾಸ್, ಪಿ.ಎಸ್.ಭರತ್, ಮಡಿಕೇರಿ ನಗರಸಭಾ ಮಾಜಿ ಸದಸ್ಯ ಅಶ್ರಫ್, ಕಡ್ಡಿ ಸುಂದರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Comments