ನೂತನ ಸಚಿವರ ಪದಗ್ರಹಣಕ್ಕೆ ಮುಹೂರ್ತ ನಿಗದಿ: ಯಾರಿಗೆ ಲಕ್? ಯಾರಿಗೆ ಕೊಕ್?

ಸಂಪುಟಕ್ಕೆ ಸೇರುವ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಬುಧವಾರ ಸಂಜೆ 4 ಗಂಟೆ ಮಾಡಬೇಕು ಎಂದುಕೊಂಡಿದ್ದೇನೆ. ಎಲ್ಲವೂ ಅಂದುಕೊಂಡಂತೆಯೇ ಆದರೆ ನಾಳೆ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಪರಿಷತ್ ಸದಸ್ಯರಾದ ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್, ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಬಹುಮತದಿಂದ ಆಯ್ಕೆಯಾದ ಮುನಿರತ್ನ, ಬೆಳಗಾವಿಯ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ಕ್ಷೇತ್ರದ ಹಿರಿಯ ಶಾಸಕ ಎಸ್.ಎಂ.ಅಂಗಾರ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಒಟ್ಟು 7 ಮಂದಿ ನೂತನವಾಗಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಗೊತ್ತಾಗಿದೆ.
ಈ ಮಧ್ಯೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು 'ಮೂಲ ಕಾರಣಕರ್ತ' ಎಂದು ಹೇಳಲಾಗುತ್ತಿರುವ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಧಾನಸಭೆಯಲ್ಲಿ ಸರಕಾರದ ಮುಖ್ಯಸಚೇತಕ ಆಗಿರುವ ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನೀಲ್ ಕುಮಾರ್, ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹನ್ನೆರಡಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದು, ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬುದು ಕುತೂಹಲ ಸೃಷ್ಟಿಸಿದೆ.
Comments