ಕುಮಾರ ಪರ್ವದ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಹುಬ್ಬಳ್ಳಿ ನಡೆಯಲಿದೆ

15 Nov 2017 10:52 AM | Politics
340 Report

ಜೆಡಿಎಸ್ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಮ್ಮಿಕೊಂಡಿದ್ದು , ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ಹೆಣೆಯಲು ಮುಂದಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿದೆ.

ರಾಜ್ಯ ಕಾರ್ಯಕಾರಣಿಯಲ್ಲಿ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಕಾರ್ಯಕಾರಿಣಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ದ ಹೋರಾಟ , ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ, ವಿಕಾಸವಾಹಿನಿ ಯಾತ್ರೆಯ ರೂಪುರೇಷೆ, ರಾಜ್ಯದ ವಿವಿಧೆಡೆ ಸಮಾವೇಶಗಳನ್ನು ನಡೆಸುವುದು, ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಬಗೆಹರಿಸುವುದು, ವಿವಿಧ ಮುಖಂಡರ ಪಕ್ಷ ಸೇರ್ಪಡೆ, ಜನತಾ ಪರಿವಾರದ ನಾಯಕರ ಒಗ್ಗೂಡಿಸುವಿಕೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ. 
ರಾಷ್ಟ್ರೀಯ ಪಕ್ಷಗಳ ಜನ ವಿರೋಧಿ ನೀತಿಯಿಂದ ರಾಜ್ಯದ ಜನ ಬೇಸತ್ತಿದ್ದು , ಪ್ರಾದೇಶಿಕ ಪಕ್ಷದತ್ತ ಒಲವು ತೋರಿದ್ದಾರೆ. ಈ ಪರಿಸ್ಥಿತಿಯ ಲಾಭ ಪಡೆಯುವ ಮೂಲಕ ನಾವು ಅಧಿಕಾರಕ್ಕೆ ಬರಬೇಕೆಂಬ ಇರಾದೆ ಜೆಡಿಎಸ್‍ನದ್ದಾಗಿದ್ದು , ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಲವು ಕಾರ್ಯತಂತ್ರಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಜಾರಿಗೊಳಿಸುತ್ತಿದ್ದಾರೆ. ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದ ವಿವಿಧೆಡೆ ಇವರ ಈ ಯೋಜನೆಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸದೊಂದಿಗೆ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ. ನಾಳೆ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರನ್ನು, ಮುಖಂಡರನ್ನು ಹುರಿದುಂಬಿಸಲಿದ್ದಾರೆ.

Edited By

venki swamy

Reported By

Madhu shree

Comments