ಜೆಡಿಎಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಭೆ ಆಯೋಜಿಸಿದ ಎಚ್ ಡಿಕೆ

04 Dec 2017 3:43 PM | Politics
326 Report

ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಗರದ 10 ವಿಧಾನಸಭಾ ಕ್ಷೇತ್ರಗಳ ಪಕ್ಷದ ಮುಖಂಡರ ಸಭೆಯನ್ನು ನಡೆಸಿದರು. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ನಿನ್ನೆ ಮತ್ತು ಇಂದು ಸಭೆ ನಡೆಸಿದ ಕುಮಾರಸ್ವಾಮಿ ಅವರು, ಸರ್ವಸಮ್ಮತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿಧಾನಸಭಾ ಕ್ಷೇತ್ರವಾರು ಪಕ್ಷದ ಮುಖಂಡರ ಅಭಿಪ್ರಾಯವನ್ನು ಪಡೆದಿದ್ದಾರೆ.

ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಒಳಗೊಂಡಂತೆ ಮುಖಂಡರ ಸಭೆ ನಡೆಸಿದ ಕುಮಾರಸ್ವಾಮಿ ಅವರು, ಟಿಕೆಟ್‍ಗೆ ತೀವ್ರ ಪೈಪೋಟಿ ಇರುವ 10 ಕ್ಷೇತ್ರಗಳ ಸಭೆಯನ್ನು ಇಂದು ಪೂರ್ಣಗೊಳಿಸಿದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭಿನ್ನಮತ ಮತ್ತು ಬಂಡಾಯ ಉಂಟಾಗಾಬಾರದು ಎಂಬ ಉದ್ದೇಶದಿಂದ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಕಸರತ್ತು ನಡೆಸಿದರು.

ನಿನ್ನೆ ಯಲಹಂಕ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಹಾಗೂ ಕ್ಷೇತ್ರ ಉಸ್ತುವಾರಿಗಳ ಸಭೆಯನ್ನು ನಡೆಸಿದ್ದರು. ಇಂದು ರಾಜಾಜಿನಗರ, ಗೋವಿಂದರಾಜನಗರ, ಚಿಕ್ಕಪೇಟೆ, ಬಸವನಗುಡಿ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆಯನ್ನು ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.

Edited By

Shruthi G

Reported By

Shruthi G

Comments