ಸಾಚಾರ್ ಸಮಿತಿಯನ್ನು ಜಾರಿಗೊಳಿಸುವಂತೆ ಭರವಸೆ ಕೊಟ್ಟ ಪ್ರಜ್ವಲ್ ರೇವಣ್ಣ

05 Dec 2017 11:54 AM | Politics
363 Report

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಬಹುಮತ ಗಳಿಸಿ ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ರಾಜ್ಯದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು. ಮುಸ್ಲಿಂ ಸಮಾಜದ ಬಹುದಿನಗಳ ಬೇಡಿಕೆಯಾದ ಸಾಚಾರ್ ಸಮಿತಿಯನ್ನು ಜಾರಿಗೊಳಿಸಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಭರವಸೆ ನೀಡಿದರು.

ನಗರದ ಸತ್ಯಗಾರ್ಡನ್‌ನಲ್ಲಿ ಜೆಡಿಎಸ್ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ‘ಮನೆ-ಮನೆಗೆ ಕುಮಾರಣ್ಣ’ ಹಾಗೂ ಜೆಡಿಎಸ್‌ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ರೈತರು ಇಂದು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರಗಳು ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಬದಲಾಗಿ ಒಬ್ಬರ ಮೇಲೊಬ್ಬರು ಗೂಬೆ ಕೂರಿಸುವ ಕೆಲಸದಲ್ಲಿ ನಿರತರಾಗಿ ರೈತ ಹಿತ ಕಡೆಗಣಿಸಿದ್ದಾರೆ. ಈ ಹಿಂದೆ ಆಡಳಿತ ನಡೆಸಿದ ಜೆಡಿಎಸ್ ನೇತೃತ್ವದ ಸರ್ಕಾರ ಸಾಲಮನ್ನಾ ಮಾಡುವ ಮೂಲಕ ರೈತರ ನೆರವಿಗೆ ಸ್ಪಂದಿಸಿ ರೈತಪರವೆಂದು ಸಾಬೀತು ಪಡಿಸಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ಜೆಡಿಎಸ್‌ಗೆ ಒಲವು ವ್ಯಕ್ತವಾಗುತ್ತಿದ್ದು, ವಿಶೇಷವಾಗಿ ಯುವಕರು ರಾಜ್ಯದ 224 ಕ್ಷೇತ್ರಗಳಲ್ಲಿಯೂ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಅಲ್ಲದೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಅವರು ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಮೆಚ್ಚಿ ಪಕ್ಷ ಬೆಂಬಲಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದ್ದು, ದಲಿತ ವರ್ಗಕ್ಕೆ ಸೇರಿದ ನಾಯಕರನ್ನು ಉಪಮುಖ್ಯಮಂತ್ರಿಯಾಗಿ ಮಾಡಲಾಗುವುದು. ಮುಸ್ಲಿಂ ಸಮುದಾಯವನ್ನು ದೇವೇಗೌಡರ ಕುಟುಂಬ ಯಾವಾಗಲೂ ಪ್ರೀತಿ, ವಿಶ್ವಾಸದಿಂದ ಕಾಣುತ್ತದೆ. ಸ್ಥಳೀಯ ಸಿಂಧನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾಡಗೌಡರನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಉದ್ಯಮಿ ಬಿ.ಹರ್ಷ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಹರ್ಷ ಅವರನ್ನು ಪಕ್ಷದ ಮುಖ್ಯ ಸಂಚಾಲಕರನ್ನಾಗಿ ನೇಮಕ ಮಾಡಿಲಾಯಿತು. ಇದಕ್ಕೂ ಮುನ್ನ ಗಂಗಾವತಿ ಮುಖ್ಯರಸ್ತೆಯಲ್ಲಿರುವ ರಿಲಿಯನ್ಸ್ ಪೆಟ್ರೊಲ್ ಬಂಕ್‌ನಿಂದ ಪ್ರಮುಖ ಬೀದಿಗಳಲ್ಲಿ ಪ್ರಜ್ವಲ್ ರೇವಣ್ಣ ಅವರೊಂದಿಗೆ ಬೈಕ್‌ ರ‍್ಯಾಲಿ ನಡೆಸಲಾಯಿತು.ತುಂಗಭದ್ರಾ ಜಲಾಶಯದಿಂದ ರೈತರ ಬೆಳೆಗೆ ನೀರು ಬಿಡುವ ವಿಚಾರದಲ್ಲಿ ಗೊಂದಲ ಸೃಷ್ಟಿಸುವುದು ಬೇಡ. ಮಾರ್ಚ್ 30ರವರೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

 

Edited By

Shruthi G

Reported By

Shruthi G

Comments