ಜನವರಿಯಲ್ಲಿ ಜಿಲ್ಲಾ ಜೆಡಿಎಸ್ ಸಮಾವೇಶ: ಪ್ರಚಾರಾರ್ಥ ಬೈಕ್ ರ‍್ಯಾಲಿ

12 Dec 2017 12:49 PM | Politics
291 Report

ಮುಂದಿನ ಜನವರಿ ತಿಂಗಳ ಎರಡನೇ ವಾರದಲ್ಲಿ ಮಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದ ಹಿನ್ನೆಲೆಯಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದಿನ ಪ್ರಚಾರಾರ್ಥ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಉತ್ತಮನ್ ಪಿಳ್ಳೆ ತಿಳಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ , ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಮತ್ತಿತರ ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪ್ರತೀ ಬೂತ್ ಮಟ್ಟದಿಂದ ಕನಿಷ್ಠ 20 ಕಾರ್ಯಕರ್ತರನ್ನು ಸಮಾವೇಶಕ್ಕೆ ಬರುವಂತೆ ಮಾಡಲಾಗುವುದು. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದಿಂದಾಗಿ ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದು, ತಮ್ಮ ಆಡಳಿತದ ವೇಳೆ ಕ್ರಾಂತಿಕಾರಿ ಯೋಜನೆಗಳ ಮೂಲಕ ಉತ್ತಮ ಆಡಳಿತ ನೀಡಿದ್ದ ಜೆಡಿಎಸ್ ಪಕ್ಷದತ್ತ ಜನತೆ ಒಲವು ವ್ಯಕ್ತಪಡಿಸುತ್ತಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಆಡಳಿತಕ್ಕೆ ಬರುವುದು ಸ್ಪಷ್ಟವಾಗಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿಯೂ ಈ ಬಾರಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದರು. ಕಳೆದ ಆಗಸ್ಟ್ ತಿಂಗಳಿನಿಂದ ಪಕ್ಷಕ್ಕೆ ಕಾರ್ಯಕರ್ತರನ್ನು ಸೇರಿಸಿಕೊಳ್ಳುವ ಸದಸ್ಯತನ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯಲ್ಲಿ ಈ ತನಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಸೇರಿದಂತೆ 15 ಸಾವಿರ ಸದಸ್ಯರ ಸೇರ್ಪಡೆಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಶೇ.87ರಷ್ಟು ಬೂತ್ ಕಮಿಟಿಗಳ ರಚನೆ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದರು.

Edited By

Hema Latha

Reported By

Madhu shree

Comments