ಜನರ ಪ್ರೀತಿ ವಿಶ್ವಾಸಕ್ಕೆ ನಾವು ಚಿರಋಣಿ : ಎಚ್ ಡಿಕೆ

16 Dec 2017 3:16 PM | Politics
395 Report

ಹೃದಯ ಶಸ್ತ್ರಚಿಕಿತ್ಸೆಯ ನಂತರ ತಮಗೆ ಪುನರ್ಜನ್ಮ ದೊರೆತಿದ್ದು, ಇದನ್ನು ನಾಡಿನ ಜನರ ಸೇವೆಗೆ ಮುಡಿಪಾಗಿಡುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ನಾಡಿನ ಜನರ ಕಲ್ಯಾಣಕ್ಕಾಗಿ ನಾವು ಸದಾ ಕಂಕಣಬದ್ದರಾಗಿ ಕೆಲಸ ಮಾಡುತ್ತೇವೆ. ಜನರ ಪ್ರೀತಿ ವಿಶ್ವಾಸಕ್ಕೆ ನಾವು ಚಿರಋಣಿ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಮಾನಿಗಳಿಗೆ ಪ್ರತಿಕ್ರಿಯಿಸಿದ ಅವರು, ಕಾರ್ಯಕರ್ತರೇ ನನ್ನ ಶಕ್ತಿ ಎಂದರು.

ತಮ್ಮ 59ನೆ ಹುಟ್ಟುಹಬ್ಬದ ಅಂಗವಾಗಿ ನಗರದ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನರ ಆಶೋತ್ತರಗಳಿಗೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ನಿವಾರಿಸಿ ಉತ್ತಮ ಆಡಳಿತ ನೀಡಲು ತಮ್ಮ ಜೀವನವನ್ನು ಮೀಸಲಿರಿಸುವುದಾಗಿ ಹೇಳಿದರು. ನಾಡಿನ ಜನರ ಕಲ್ಯಾಣಕ್ಕಾಗಿ ನಾವು ಸದಾ ಕಂಕಣಬದ್ದರಾಗಿ ಕೆಲಸ ಮಾಡುತ್ತೇವೆ. ಜನರ ಪ್ರೀತಿ ವಿಶ್ವಾಸಕ್ಕೆ ನಾವು ಚಿರಋಣಿ. ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಜನರಿಗೆ ಎಲ್ಲಾ ಭರವಸೆಗಳನ್ನು ಈಡೇರಿಸಲು ಸಾಧ್ಯ. ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ ಕನಿಷ್ಠ 15 ಕ್ಷೇತ್ರಗಳಲ್ಲಾದರೂ ಪಕ್ಷವನ್ನು ಗೆಲ್ಲಿಸಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದ ಅವರು, ಸಮ್ಮಿಶ್ರ ಸರ್ಕಾರದಿಂದ ಸಂಪನ್ಮೂಲ ಕ್ರೋಢೀಕರಣ ಹಾಗೂ ಜನಪರ ಕೆಲಸ ಮಾಡಲು ಸ್ವಾತಂತ್ರ್ಯವಿರುವುದಿಲ್ಲ.

ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಜನರಿಗಾಗಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಈಗಾಗಲೇ ಪಕ್ಷ ಸಂಘಟನೆಗೆ ಚಾಲನೆ ನೀಡಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರುವವರೆಗೂ ವಿಶ್ರಮಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾವುದೇ ಕಾರಣಕ್ಕೂ ನಿಖಿಲ್ ರಾಜಕೀಯಕ್ಕೆ ಬರುವ ಪ್ರಶ್ನೆ ಇಲ್ಲ. ಆದರೆ ಪಕ್ಷದ ಪ್ರಚಾರದಲ್ಲಿ ಭಾಗವಹಿಸುತ್ತಾನೆ ಎಂದು ಸ್ಪಷ್ಟನೆ ನೀಡಿದರು. ಶಿಕ್ಷಣ ಸೇರಿದಂತೆ ಆರೋಗ್ಯ ಇನ್ನಿತರ ಕ್ಷೇತ್ರಗಳಲ್ಲಿ ಸೂಕ್ತ ನಿರ್ಧಾರ ಕೈಗೊಂಡು ಜನರಿಗೆ ಅನುಕೂಲ ಕಲ್ಪಿಸಬೇಕಿದೆ. ಈ ನಿಟ್ಟಿನಲ್ಲಿ ನಾವು ಜನರ ಒಳಿತನ್ನೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತೇವೆ. ನಿಮ್ಮ ಎಲ್ಲ ಸಮಸ್ಯೆ ನೀಗಿಸುತ್ತೇವೆ. ಯುವಜನರಿಗೆ ಉದ್ಯೋಗ, ವೃದ್ಧಾಪ್ಯ ವೇತನ, ವಿಧವಾವೇತನ ಸೇರಿದಂತೆ ಅವಶ್ಯಕತೆಗಳನ್ನು ಪೂರೈಸಲು ಕಾರ್ಯೋನ್ಮುಖರಾಗುತ್ತೇವೆ ಎಂದರು.

 

Edited By

Shruthi G

Reported By

Madhu shree

Comments