ಡಿ.23ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

19 Dec 2017 11:03 AM | Politics
403 Report

ರಾಜ್ಯದ ಅಧಿಕಾರದ ಗದ್ದುಗೆ ಹಿಡಿಯಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈ ವಾರಾಂತ್ಯದೊಳಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಉದ್ದೇಶಿಸಿರುವ ಜೆಡಿಎಸ್ ಈಗಾಗಲೇ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸತೊಡಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೊದಲ ಹಂತದ ಸುಮಾರು 140 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ಈ ವಾರಾಂತ್ಯದಲ್ಲಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಭವವಿದೆ ಎಂದು ಜೆಡಿಎಸ್‍ನ ಉನ್ನತ ಮೂಲಗಳು ತಿಳಿಸಿವೆ. ತೀವ್ರ ಪೈಪೋಟಿ ಇದ್ದ ಹಲವು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಹಾಗೂ ಪಕ್ಷದ ಪ್ರಮುಖ ಮುಖಂಡರ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆಯನ್ನು ಕುಮಾರಸ್ವಾಮಿ ಅಂತಿಮಗೊಳಿಸಿದ್ದಾರೆ. ಇತ್ತೀಚೆಗೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲೂ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವಾಗಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಪಕ್ಷಗಳು ಬಿಡುಗಡೆ ಮಾಡುವ ಅಭ್ಯರ್ಥಿಗಳ ಪಟ್ಟಿಗಾಗಿ ಕಾಯದೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಚುನಾವಣಾ ತಯಾರಿ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಡಿ.23ರಂದು ಜೆಡಿಎಸ್‍ನ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.  ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ಶತಾಯಗತಾಯ ಪ್ರಯತ್ನ ನಡೆಸಿ ಬಹುಮತ ಗಳಿಸಬೇಕೆಂಬ ಬಯಕೆಯನ್ನು ಹೊಂದಿದೆ. ಇದಕ್ಕಾಗಿ ಹಗಲಿರುಳು ಕಾರ್ಯಕರ್ತರು ಶ್ರಮಿಸುವಂತೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ.

ಜೆಡಿಎಸ್‍ನ 40 ಮಂದಿ ಶಾಸಕರ ಪೈಕಿ ಅಮಾನತುಗೊಂಡಿರುವ ಏಳು ಮಂದಿ ಶಾಸಕರನ್ನು ಹೊರತುಪಡಿಸಿ ಉಳಿದ 33 ಮಂದಿ ಶಾಸಕರಿಗೆ ಟಿಕೆಟ್ ನೀಡುವುದು ಖಾತರಿಯಾಗಿದೆ.ಅಲ್ಲದೆ, ಭಾರೀ ಪೈಪೋಟಿ ಇಲ್ಲದ ಹಾಗೂ ಸರ್ವಸಮ್ಮತ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಿಸಿದ್ದಾರೆ. ಇನ್ನು ಬಹಳಷ್ಟು ಮಂದಿಗೆ ಟಿಕೆಟ್ ಕೊಡುವ ಖಾತ್ರಿ ನೀಡಿ ತಮ್ಮ ತಮ್ಮ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

Edited By

Shruthi G

Reported By

Shruthi G

Comments