ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ..!!

07 Mar 2018 2:20 PM |
14242 Report

ಜೆಡಿಎಸ್ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಕಗ್ಗಂಟಾಗಿದೆ. ಹಲವಾರು ಆಕಾಂಕ್ಷಿಗಳಿದ್ದು, ಯಾರು ಅಭ್ಯರ್ಥಿ ಎಂಬುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜೆಡಿಎಸ್ ಪಕ್ಷ ಈಗಾಗಲೇ 126 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಇದರಲ್ಲಿ ಮಂಡ್ಯ ಹೊರತು ಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ ಕೆ.ಆರ್.ಪೇಟೆ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿದ್ದರು. ಆದರೆ, ನಾಗಮಂಗಲ, ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಒಂದು ವಾರದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ. ಎಂ.ಶ್ರೀನಿವಾಸ್ ಅವರು ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. 2013ರ ಚುನಾವಣೆಯಲ್ಲಿಯೂ ಅವರು ಸ್ಪರ್ಧಿಸಿ 47,392 ಮತಗಳನ್ನು ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಆದ್ದರಿಂದ, ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ತಡವಾಗಿದೆ. ಒಂದು ವಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಅಭ್ಯರ್ಥಿಗಳ ಜೊತೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.

Edited By

Shruthi G

Reported By

hdk fans

Comments