ಮಂಡ್ಯ ಲೋಕಸಭಾ ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ ಜೆಡಿಎಸ್ ನಿಂದ ಈ ಪ್ರಭಾವಿ ನಾಯಕ..!!

25 Sep 2018 4:26 PM |
14391 Report

ಮುಂಬರುವ 2019 ರ ಲೋಕಸಭಾ ಚುನಾವಣೆ ಭಾರೀ ಕುತೂಹಲ ಮೂಡಿಸಿದ್ದು , ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ ಎನ್ನಲಾಗಿದೆ. ಜೆಡಿಎಸ್ ಪಕ್ಷದಿಂದ ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು? ಎಂಬುದು ಎಲ್ಲರಲೂ ತೀವ್ರ ಕುತೂಹಲ ಮೂಡಿಸಿದೆ.

ಸಿ.ಎಸ್.ಪುಟ್ಟರಾಜು ಅವರು ಮಂಡ್ಯ ಕ್ಷೇತ್ರದ ಸಂಸದ ಸ್ಥಾನದಿಂದ ತೆರವಾಗಿದ್ದಾರೆ. ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, 2019ರ ಚುನಾವಣೆ ಅಭ್ಯರ್ಥಿ ಯಾರು? ಎಂಬ ಚರ್ಚೆಗಳು ಆರಂಭವಾಗಿದೆ. ನಾಲ್ವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಾಗಿ ಈಗಾಗಲೇ ಘೋಷಣೆ ಮಾಡಿವೆ. ಆದರೆ, ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡಲು ಜೆಡಿಎಸ್ ಒಪ್ಪುತ್ತಿಲ್ಲ . ಜಿಲ್ಲೆಯ 7 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಶಾಸಕರು ಗೆದ್ದು ಬಂದಿದ್ದಾರೆ. ಮಂಡ್ಯ ಕ್ಷೇತ್ರದಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಪ್ರಸ್ತುತ ಅವರು ಹಾಸನ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿದ್ದಾರೆ. 2019ರಲ್ಲಿ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ. ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟು, ಮಂಡ್ಯದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿ ಹಲವು ದಿನಗಳು ಕಳೆದಿವೆ. ಆದರೆ, ದೇವೇಗೌಡರು ಈ ಬಗ್ಗೆ ಅಧಿಕೃತವಾದ ಹೇಳಿಕೆ ನೀಡಿಲ್ಲ.

ಪ್ರಜ್ವಲ್ ರೇವಣ್ಣ ಅವರು ಹಾಸನ ಅಥವ ಮಂಡ್ಯದಿಂದ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. ಎಚ್.ಡಿ.ದೇವೇಗೌಡರು ಯಾವು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ? ಎಂಬುದರ ಮೇಲೆ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಕ್ಷೇತ್ರ ಅಂತಿಮವಾಗಲಿದೆ. ಮಾಜಿ ಸಚಿವ ಅಂಬರೀಶ್ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.. ಅಂಬರೀಶ್ ಈಗಾಗಲೇ ಕಾಂಗ್ರೆಸ್‌ನಿಂದ ದೂರವಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಜೆಡಿಎಸ್ ಬೆಂಬಲಿಸಿದ್ದರು. ಆದರೆ, ಅಧಿಕೃತವಾಗಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಅಂಬರೀಶ್ ಅವರು ಮಂಡ್ಯ ಕ್ಷೇತ್ರದ ಮಾಜಿ ಸಂಸದರು. ಅವರ ಆಪ್ತರಾದ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದಾರೆ. ಚುನಾವಣೆ ಹತ್ತಿರುವಾಗುತ್ತಿರುವಾಗ ಅವರು ಜೆಡಿಎಸ್ ಸೇರಿ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕು ಎಂಬುದು ಜೆಡಿಎಸ್ ಪಕ್ಷದ ಗುರಿ. ಆದ್ದರಿಂದ, ಸಿ.ಎಸ್.ಪುಟ್ಟರಾಜು ಅವರನ್ನು ಪುನಃ ಕಣಕ್ಕಿಳಿಸಲಾಗುತ್ತದೆ ಎಂಬ ಮಾತು ಕೂಡ ಕೇಳಿಬರುತ್ತಿವೆ.

 

Edited By

Shruthi G

Reported By

hdk fans

Comments